ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳವು, ಸರಗಳ್ಳತನ, ಗಾಂಜಾ ಪ್ರಕರಣ ಸೇರಿದಂತೆ 56 ಕೇಸುಗಳನ್ನು ಬೇಧಿಸಿರುವ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಮಾಲು ವಶಪಡಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ನೆಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ವಿವಿಧ ಠಾಣೆಗಳಲ್ಲಿ ಬೇಧಿಸಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು.
ಎಎಸ್ಪಿ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ, ಪಿ ಮಾರ್ಗದರ್ಶನದಲ್ಲಿ ಕಳುವಾಗಿರುವ ಮಾಲುಗಳ ಪತ್ತೆಗೆ ಉಪ ವಿಭಾಗ ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಗಳ ಬೆನ್ನ ಹತ್ತಿದ ಪೊಲೀಸರು 30 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಸುಮಾರು 1.20 ಕೋಟಿಗೂ ಹೆಚ್ಚು ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ರವಿ ಸೇರಿದಂತೆ ಎಲ್ಲ ಠಾಣೆಗಳ ಪಿಐ ಗಳು, ಪಿಎಸ್‌ಐಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.