ವಸತಿ ಶಾಲೆಗಳ ಮೂಲ ಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಸೂಚನೆ

ಚಾಮರಾಜನಗರ:ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣಕ್ಕೆ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕೆಂದು ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಪಂಚಾಯತ್ ವಿಶೇಷ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾವು ವಸತಿ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಮೂಲ ಸೌಕರ್ಯಗಳಲ್ಲಿ ಕೊರತೆ ಇರುವುದು ಕಂಡು ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗಾಗಿ ಇರುವ ವಸತಿ ಶಾಲೆಗಳಲ್ಲಿ ಸಮರ್ಪಕವಾಗಿ ಮೂಲ ಸೌಲಭ್ಯಗಳು ಇವೆಯೇ ಎಂಬ ಬಗ್ಗೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಬೇಕು. ನ್ಯೂನತೆ ಕೊರತೆಗಳಿದ್ದಲ್ಲಿ ಪಟ್ಟಿ ಮಾಡಿ ಗಮನಕ್ಕೆ ತರಬೇಕು. ಇದು ನಿಮ್ಮ ಜವಾಬ್ದಾರಿಯಾಗಿದೆ. ಸೌಲಭ್ಯಗಳ ಸುಧಾರಣೆಗೆ ನಿರಂತರ ಗಮನ ಹರಿಸಬೇಕು. ಶೈಕ್ಷಣಿಕ ಗುಣಮಟ್ಟ ಹೆಚ್ಚಳವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಅಭಿವೃದ್ದಿ ಕಾಮಗಾರಿಗಳ ನಿರ್ವಹಣೆ ಮಾಡುವಾಗ ಗುಣಮಟ್ಟದ ಕೆಲಸವಾಗಬೇಕು. 5 ಲಕ್ಷ ರೂ. ಒಳಗಿನ ಕಾಮಗಾರಿಗಳಿಗೆ ಆರಂಭದಿಂದಲೇ ಸೋಶಿಯಲ್ ಆಡಿಟ್ ಆಗಬೇಕು. ತ್ವರಿತವಾಗಿ ಇಲಾಖಾ ಅನುದಾನದಡಿ ಕಾಮಗಾರಿ ನಡೆಯಬೇಕು. ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು ಎಂದು ತಾಕೀತು ಮಾಡಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿಗಳು ಸರ್ಕಾರದ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರನ್ನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ವೇಗ ಇರಬೇಕು ಎಂದರು.
ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ವೇಳೆ ಜಿಲ್ಲೆಯ ಬೆಳೆ ಇನ್ನಿತರ ವಿವರ ಪಡೆದ ಕಾರ್ಯದರ್ಶಿಗಳು ಮಳೆ ಕೊರತೆ ಕಾರಣದಿಂದ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಬಗ್ಗೆ ಹೆಚ್ಚು ಒತ್ತು ನೀಡಬೇಕಿದೆ. ರೈತರಿಗೆ ಸಕಾಲದಲ್ಲಿ ಅವಶ್ಯವಿರುವ ನೆರವು ಮಾರ್ಗದರ್ಶನ ಸಿಗಬೇಕು. ಕೃಷಿ ಚಟುವಟಿಕೆಗಳಿಗೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ತಿಳಿಸಿದರು.

ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿರುವ ಸಾಲ ಸೌಲಭ್ಯ ಬಗ್ಗೆ ಪ್ರಗತಿ ಪರಿಶೀಲಿಸಿದ ವೇಳೆ ಸಹಕಾರ ಸಂಘಗಳಿಗೆ ರೈತರ ನೋಂದಣಿ ಮಾಡಿಸುವಲ್ಲಿ ಸಹಕಾರ ಇಲಾಖೆ ವಿಶೇಷ ಮುತುವರ್ಜಿ ವಹಿಸಬೇಕು. ಸಹಕಾರ ಸಂಘಗಳಿಗೆ ಸದಸ್ಯರಾಗುವುದರಿಂದ ಯಶಸ್ವಿನಿ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಲು ಅನುಕೂಲವಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದ ರೈತರಿಗೆ ಸಹಕಾರ ಸಂಘದ ಸದಸ್ಯತ್ವಕ್ಕೆ ಇಲಾಖೆಯಿಂದಲೇ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಕಾರ್ಯಕ್ರಮ ಸದ್ಬಳಕೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ತಿಳಿಸಿದರು.

ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


ವರದಿ ಆರ್ ಉಮೇಶ್ ಚಾಮರಾಜನಗರ