ಬಾರತ್ ಜೋಡೋ ಯಾತ್ರೆಗೆ ಅಡ್ಡಿ-ಕಾಂಗ್ರೆಸ್ ಪ್ರತಿಭಟನೆ.
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಮೇಲೆ ದಾಳಿ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಾಲ್ಲೂಕು ಕಛೇರಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಬಾಗವಹಿಸಿ ಅಸ್ಸಾಂ ಮುಖ್ಯಮಂತ್ರಿ ವಿಮಂತ್ ಬಿಸ್ವಾಸ್ ವಿರುದ್ದ ಘೋಷಣೆ ಕೂಗಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ ಮಾತನಾಡಿ, ಮಣಿಪುರದಿಂದ ಆರಂಭಿಸಿದ ಭಾರತ್ ಜೋಡೋ ನ್ಯಾಯ ಯಾತ್ರೆಯು ಅಸ್ಸಾಂ ಪ್ರವೇಶಿಸಿದಾಗ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ಬಿಜೆಪಿ ಮುಖಂಡರು ಗೂಂಡಗಳನ್ನು ಬಿಟ್ಟು ನ್ಯಾಯ ಯಾತ್ರೆಗೆ ಅಡ್ಡಿಪಡಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ವಿಮಂತ್ ಬಿಸ್ವಾಸ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದಾಳಿ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹಿರಿಯ ಮುಖಂಡ ಸಿ.ಡಿ.ಸತ್ಯನಾರಾಯಣಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಸೇರಿದಂತೆ ಎಲ್ಲ ಮುಂಚೂಣಿ ಘಟಕಗಳ ಮುಖಂಡರು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.