ರಾಷ್ಟ್ರೀಯ ವಯೋಶ್ರೇಷ್ಠ ಸನ್ಮಾನ ಯೋಜನೆ :
ನಗರದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣೆ

ಚಾಮರಾಜನಗರ: ಫೆಬ್ರವರಿ 15- ಸಂಧ್ಯಾಕಾಲದಲ್ಲಿ ಉತ್ತಮ ಜೀವನ ನಡೆಸಲು ನೆರವಾಗುವ ಸಲುವಾಗಿ ಜಿಲ್ಲೆಯ 890 ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳನ್ನು ನಗರದಲ್ಲಿ ಸಮರ್ಪಣೆ ಮಾಡಲಾಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾಗಿರುವ ಸಾಧನ ಸಲಕರಣೆಗಳನ್ನು ಉಚಿತವಾಗಿ, ಸಾಂಕೇತಿಕವಾಗಿ ವಿತರಿಸಲಾಯಿತು.

ಆರಂಭದಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಡಾ. ವೀರೆಂದ್ರಕುಮಾರ್ ಅವರು ದೆಹಲಿಯಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳನ್ನು ಸಮರ್ಪಣೆಗೊಳಿಸುವ ರಾಷ್ಟ್ರೀಯ ವಯೋಶ್ರೇಷ್ಠ ಸನ್ಮಾನ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವರ್ಚುವೆಲ್ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಿರಿಯ ನಾಗರಿಕರನ್ನು ಪ್ರತಿಯೊಬ್ಬರು ಗೌರವಿಸಬೇಕು. ಇತ್ತೀಚಿನ ದಿನಗಳಲ್ಲಿ ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿದ್ದು, ಸರ್ಕಾರವು ಹಿರಿಯರ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಾಧನ, ಸಲಕರಣೆಗಳ ವಿತರಣೆ ಸಂಬಂಧ ಸಮೀಕ್ಷೆ ನಡೆಸಲಾಗಿತ್ತು. ವಯೋಸಹಜ ಅಂಗವಿಕಲತೆಯಿಂದಾಗುವ ಸಮಸ್ಯೆಗಳನ್ನು ನಿವಾರಿಸಲು ಸಾಧನ-ಸಲಕರಣೆಗಳು ಸಹಕಾರಿಯಾಗಲಿವೆ. ಹಿರಿಯರು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಆಗಮಾತ್ರ ಯೋಜನೆ ಸಫಲವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುತ್ತಿದೆ. ಹಿರಿಯರಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳಲ್ಲಿ ಶೇ. 5ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರವು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದು ಉತ್ತಮ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಅವರು ಮಾತನಾಡಿ, ಅಂಗವಿಕಲತೆ ಶಾಪವಲ್ಲ. ನಾಗರಿಕರು ಅಂಗವಿಕಲತೆಯನ್ನು ಮೆಟ್ಟಿ ನಿಲ್ಲಬೇಕೆ ಹೊರತು ಕುಗ್ಗಬಾರದು. ಸಮಾಜದಲ್ಲಿ ಪರಾವಲಂಬಿಯಾಗದೇ ಸರ್ಕಾರದ ಸೌಲಭ್ಯಗಳನ್ನು ಪಡೆದು ಜೀವನ ರೂಪಿಸಿಕೊಳ್ಳಬೇಕು ಎಂದರು.

ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಲುವಾಗಿ ವೇದಿಕೆ ಕಾರ್ಯಕ್ರಮದ ಹೊರಭಾಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ತೆರಯಲಾಗಿದ್ದ ಕೌಂಟರ್‍ಗಳಲ್ಲಿ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರು, ವಿಕಲಚೇತನರ ಪುನರ್ವಸತಿ (ವಿ.ಆರ್.ಡಬ್ಲ್ಯೂ ಮತ್ತು ಎಂ.ಆರ್. ಡಬ್ಲ್ಯೂ) ಕಾರ್ಯಕರ್ತರಿಂದ ಹಿರಿಯ ನಾಗರಿಕರ ನೊಂದಣಿ ವ್ಯವಸ್ಥೆ ಮಾಡಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಸುರೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚೆಲುವರಾಜು, ಅಲಿಂಕೋ ಸಂಸ್ಥೆಯ ಗೋಪಾಲಕೃಷ್ಣನ್, ಶಿವಕುಮಾರ್ ದಿನೇಶ್, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ