ಅಕ್ಷರ ಮಾದರಿಯಲ್ಲಿ ಬೃಹತ್ ಸಂಖ್ಯೆಯ ವಿದ್ಯಾರ್ಥಿಗಳಿಂದ ಮೂಡಿದ ನಮ್ಮ ಸಂವಿಧಾನ ನಮ್ಮ ಹೆಮ್ಮೆ : ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸಂವಿಧಾನ
ಅಕ್ಷರ ಮಾದರಿಯಲ್ಲಿ ಬೃಹತ್ ಸಂಖ್ಯೆಯ ವಿದ್ಯಾರ್ಥಿಗಳಿಂದ ಮೂಡಿದ ನಮ್ಮ ಸಂವಿಧಾನ ನಮ್ಮ ಹೆಮ್ಮೆ : ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸಂವಿಧಾನ ಜಾಗೃತಿ
ಸಂವಿಧಾನ ಅಂಗೀಕಾರವಾಗಿ 75ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಂವಿಧಾನದ ಮಹತ್ವ ಮತ್ತು ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ನಗರದಲ್ಲಿಂದು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗಮನಸೆಳೆಯಲಾಗಿದೆ.
ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್ ಅವರು ಭಾರತ ಸಂವಿಧಾನದ ಪ್ರಸ್ತಾವನೆ ಪೋಸ್ಟರ್ಗಳನ್ನು ಬಸ್ ನಿಲ್ದಾಣ ಹಾಗೂ ಬಸ್ಸುಗಳಲ್ಲಿ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು, ಸಂವಿಧಾನ ಪೀಠಿಕೆ ವಾಚನ ಮಾಡಿ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂಬ ಘೋಷವಾಕ್ಯ ಮೊಳಗಿಸಿದರು. ಸಂವಿಧಾನ ಪ್ರಸ್ತಾವನೆಯ ಪೋಸ್ಟರ್ನ ಕೆಳಭಾಗದಲ್ಲಿ ಅಳವಡಿಸಿರುವ ಕ್ಯೂ.ಆರ್ ಕೋಡ್ನಲ್ಲಿ ತಮ್ಮ ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿ ಸಂವಿಧಾನ ಜಾಗೃತಿಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 24, 25ರಂದು ನಡೆಯಲಿರುವ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಭಾಗವಹಿಸುವ ಇಚ್ಚೆಯನ್ನು ದಾಖಲಿಸಿದರು..
ಬಸ್ ನಿಲ್ದಾಣದ ಆವರಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಸಮ್ಮುಖದಲ್ಲಿ ಗ್ರಾಮಾಂತರ ಪ್ರದೇಶದ ವೃದ್ದರೊಬ್ಬರು ಸಂವಿಧಾನ ಪೀಠಿಕೆಯನ್ನು ಓದಿ ನೆರೆದಿದ್ದ ಎಲ್ಲರ ಮೆಚ್ಚುಗೆ ಗಳಿಸಿದರು. ಕೆ.ಎಸ್.ಆರ್.ಟಿಸಿ ಸಿಬ್ಬಂದಿ ಕೂಡ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಸಂವಿಧಾನ ನಮ್ಮ ಹೆಮ್ಮೆ-ಸಂವಿಧಾನ ಸಂಭ್ರಮಿಸೋಣ ಎಂಬ ಘೋಷ ವಾಕ್ಯ ಮೊಳಗಿಸಿದರು.
ನಗರದ ಸಂತ ಫ್ರಾನ್ಸಿಸ್ ಶಾಲಾ ಮೈದಾನದಲ್ಲಿಂದು ಶಾಲೆಯ 650ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂಬ ಅಕ್ಷರ ರೂಪದಲ್ಲಿ ನಿಂತು ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಒಕ್ಕೊರಲಿನಿಂದ ಘೋಷ ಮೊಳಗಿಸಿದ್ದು ವಿಶೇಷ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿನಿಯರಾದ ಬಿ.ಎಸ್. ಮಾನಸ, ಎಂ. ಕೃತಿಕಾ, ಬಿ.ಎಸ್. ಸೃಷ್ಠಿ ಸಂವಿಧಾನ ಪೀಠಿಕೆ ಬೋಧಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮಿ ಅವರ ಸಮ್ಮುಖದಲ್ಲಿ ನಡೆದ ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು ಹೆಚ್ಚು ಸಂಖ್ಯೆಯಲ್ಲಿ ವೀಕ್ಷಿಸಿ ಕರತಾಡನದ ಮೂಲಕ ಹುರಿದುಂಬಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮಹತ್ವ ಮತ್ತು ಸದಾಶಯಗಳನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಸಂವಿಧಾನ ಜಾಗೃತಿಗಾಗಿ ಜಿಲ್ಲಾದ್ಯಂತ ಅರಿವಿನ ಸ್ತಬ್ದ ಚಿತ್ರ ಸಾಗುತ್ತಿದೆ. ಈ ಉದ್ದೇಶಕ್ಕಾಗಿ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಸಂತ ಫ್ರಾನ್ಸಿಸ್ ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿಕ್ಕಬಸವಯ್ಯ, ಬಿ.ಆರ್.ಸಿ. ಬಸವರಾಜು, ಇನ್ನಿತರ ಅಧಿಕಾರಿಗಳು, ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ