ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ:ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧೆ ಮಾರ್ಚ್ 4, 5ರಂದು ನಿಗದಿಯಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿಂದು ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕತಿಕ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕ್ರೀಡಾಕೂಟ, ಇನ್ನಿತರ ಸ್ಪರ್ಧೆಗಳ ಏರ್ಪಾಡು ಮಾಡಲು ಸಿದ್ದತೆ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಶುದ್ದ ಕುಡಿಯುವ ನೀರು, ಉಪಹಾರ ವ್ಯವಸ್ಥೆಯಾಗಬೇಕು. ಕ್ರೀಡಾಂಗಣ ಹಾಗೂ ಸುತ್ತಲ ಪ್ರದೇಶದಲ್ಲಿ ನಗರಸಭೆ ವತಿಯಿಂದ ಸ್ವಚ್ಚತಾ ಕಾರ್ಯವಾಗಬೇಕು. ಕ್ರೀಡಾಕೂಟ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಆಂಬ್ಯುಲೆನ್ಸ್ ಸಹಿತ ವೈದ್ಯಕೀಯ ಸಿಬ್ಬಂದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಯೋಜನೆ ಮಾಡಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಕ್ರೀಡಾಕೂಟಕ್ಕೆ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಲು ದೈಹಿಕ ಶಿಕ್ಷಣ ಶಿಕ್ಷಕರು, ಸಾಂಸ್ಕತಿಕ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ನಿಯೋಜಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ವೇದಿಕೆ, ಆಹ್ವಾನ ಪತ್ರಿಕೆ, ಪ್ರಶಸ್ತಿ ಪತ್ರ, ಬಹುಮಾನ, ಶಾಮಿಯಾನ, ಆಸನಗಳ ವ್ಯವಸ್ಥೆ, ಇನ್ನಿತರ ಅಗತ್ಯ ಪ್ರಕ್ರಿಯೆಗೆ ಮುಂದಾಗಬೇಕು. ಶಿಷ್ಟಾಚಾರ ಪಾಲನೆಯಾಗಬೇಕು. ಕ್ರೀಡಾಕೂಟ ಹಾಗೂ ಕಾರ್ಯಕ್ರಮದ ಸುಗಮ ನಿರ್ವಹಣೆಗೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಯು ಇರಬೇಕು. ಸಾಕಷ್ಟು ಪೂರ್ವ ಸಿದ್ದತೆಗಳೊಂದಿಗೆ ಕ್ರೀಡಾಕೂಟ ಹಾಗೂ ಸಾಂಸ್ಕತಿಕ ಸ್ಪರ್ಧೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಅವರು ಮಾತನಾಡಿ ಈ ಹಿಂದಿನಿಂದಲೂ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕತಿಕ ಸ್ಪರ್ಧೆಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಂಘದ ವತಿಯಿಂದ ಅಗತ್ಯವಿರುವ ಸಕಲ ಸಿದ್ದತೆಗೆ ಕಾರ್ಯೊನ್ಮುಖರಾಗಲಿದ್ದೇವೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಫೆಬ್ರವರಿ 27ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಹಾಗೂ ಇತರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪತ್ರ ನೀಡುವ ಮೂಲಕ ಆಹ್ವಾನಿಸಿದರು.

ವರದಿ ಆರ್ ಉಮೇಶ್ ಮಲಾರಪಾಳ್ಯ