ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟಕ್ಕೆ ಚಾಲನೆ

ಚಾಮರಾಜನಗರ:ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನ ಭದ್ರತೆಗಾಗಿ ಸರ್ಕಾರಿ ಕೆಲಸಕ್ಕೆ ಬರುವ ನೌಕರರಿಗೆ ಮೊದಮೊದಲು ಅನೇಕ ಸವಾಲುಗಳು ಎದುರಾಗಬಹುದು. ನೌಕರರು ಮನೆಯಲ್ಲಿ ವೃದ್ಧರನ್ನು ನೋಡಿಕೊಳ್ಳುವ ಜವಾಬ್ದಾರಿ ಸೇರಿದಂತೆ ಇತರೆ ಸಮಸ್ಯೆಗಳನ್ನು ಮೀರಿ ಸರ್ಕಾರಿ ಕೆಲಸದಲ್ಲಿ ದಕ್ಷತೆ ಸಾಧಿಸಬೇಕಾಗುತ್ತದೆ. ಇಂತಹ ಒತ್ತಡಗಳ ನಿರ್ವಹಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಿಂದ ನೌಕರರಲ್ಲಿ ಮನೋಲ್ಲಾಸ ಮೂಡಲಿದೆ ಎಂದರು.

ನೌಕರರು ಕೆಲಸಕಾರ್ಯಗಳ ಒತ್ತಡದಲ್ಲಿ ಕುಟುಂಬದೊಂದಿಗೆ ಸಮಯ ಕಳೆಯುವ ಅವಕಾಶಗಳು ಕಡಿಮೆ. ಇತ್ತೀಚಿನ ದಿನಗಳಲ್ಲಿ ವಯಸ್ಕರು, ಇತರರು ಚಿಕ್ಕ ವಯಸ್ಸಿನಲ್ಲಿಯೇ ಹೃದಯ ರೋಗಗಳಂತಹ ಗಂಭೀರ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಇದು ಆರೋಗ್ಯದ ಕುರಿತ ಎಚ್ಚರಿಕೆಯ ಗಂಟೆಯಾಗಿದೆ. ಒತ್ತಡ ನಿವಾರಣೆಗಾಗಿ ಪ್ರತಿಯೊಬ್ಬರು ದಿನನಿತ್ಯ ವ್ಯಾಯಾಮ, ಯೋಗ, ನಡಿಗೆಯಂತಹ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಉತ್ತಮ ಆರೋಗ್ಯ ಹೊಂದಿದರೆ ಎಲ್ಲವನ್ನು ಸುಲಲಿತವಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಪುರುಷ ಹಾಗೂ ಮಹಿಳಾ ನೌಕರರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಕ್ರೀಡಾ ಮನೋಭಾವ ಮೆರೆಯಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ವೃತ್ತಿ ಜೀವನದಲ್ಲಿ ಎಲ್ಲರಿಗೂ ಗೆಲುವು ಸಿಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಆರಂಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಜಿಲ್ಲೆಯ ಐದು ತಾಲೂಕುಗಳ ತಂಡಗಳನ್ನು ಪರಿಚಯ ಮಾಡಿಕೊಂಡರು. ಬಳಿಕ ಥ್ರೋಬಾಲ್ ಎಸೆಯುವ ಮೂಲಕ 2 ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕ್ರೀಡಾ ಜ್ಯೋತಿ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ ಅವರು ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ಕೃಷಿ ಜಂಟಿ ನಿರ್ದೇಶಕರಾದ ಅಬೀಬ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಸವಿತಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿ ಎಸ್. ಮಹದೇವಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾದ ಎಚ್.ಎಸ್. ಪ್ರಸಾದ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷರಾದ ಜೋಸೆಫ್ ಅಲೆಗ್ಜಾಂಡರ್, ಹನೂರು ತಾಲೂಕು ಅಧ್ಯಕ್ಷರಾದ ಗುರುಸ್ವಾಮಿ, ಯಳಂದೂರು ತಾಲೂಕು ಅಧ್ಯಕ್ಷರಾದ ವೈ.ಎಂ. ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಾದಪ್ಪ, ತಾಲೂಕು ಅಧ್ಯಕ್ಷರಾದ ರಾಮಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ