*ಡಾ. ಬಿ.ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನ ಆಚರಣೆ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ಗೌರವ ಸಮರ್ಪಣೆ*
ಚಾಮರಾಜನಗರ, ನಗರದ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 68ನೇ ಪರಿನಿಬ್ಬಾಣ ದಿನದ ಅಂಗವಾಗಿ ನಗರದಲ್ಲಿಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಿದರು.
ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ನಗರಸಭೆ ಸದಸ್ಯರಾದ ಎಸ್. ಸುರೇಶ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಇನ್ನಿತರ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬಳಿಕ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್ ಅವರು ದೀಪ ಬೆಳಗಿಸಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಿದರು.
ಇದೇ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಎಲ್ಲಾ ಗ್ರಂಥಗಳಿಗಿಂತ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನವಾಗಿದೆ. ಅದೇ ಸಂವಿಧಾನದಡಿ ನಾವೆಲ್ಲರೂ ನೆಮ್ಮದಿಯಿಂದ ಬದುಕುತ್ತಿದ್ದೇವೆ. ಅದಕ್ಕೆ ಕಾರಣಕರ್ತರು ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ದೇಶದ ಎಲ್ಲರಿಗೂ ಸಮಾನತೆ ಒದಗಿಸಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಆಗಿದ್ದಾರೆ ಎಂದರು.
ಹಲವು ವರ್ಷಗಳ ಕಾಲ ಆಳಿದ ಬ್ರಿಟೀಷರು ದೇಶವನ್ನು ಬಡತನಕ್ಕೆ ನೂಕಿದ್ದರು. ಬಳಿಕ ಸ್ವಾತಂತ್ರ್ಯ ನಂತರ ದೇಶದಲ್ಲಿದ್ದ ಬಡತನ, ಅನಕ್ಷರತೆ, ಅಸಮಾನತೆಯನ್ನು ಹೋಗಲಾಡಿಸಿ ಪ್ರತಿಯೊಬ್ಬರಿಗೂ ಗೌರವಯುತ ಬದುಕು ಕಟ್ಟಿಕೊಡಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಹಲವಾರು ದೇಶಗಳ ಉತ್ತಮ ಸಂವಿಧಾನಗಳನ್ನು ಅಧ್ಯಯನ ಮಾಡಿದ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಏನು ಬೇಕು, ಏನು ಬೇಡ ಎಂಬುದನ್ನು ಮನಗಂಡಿದ್ದರು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯದಡಿ ಪುರುಷ, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗಗಳಿಗೂ ಸಮಾನತೆ, ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ಒದಗಿಸಿದರು. ಇದರಿಂದಾಗಿಯೇ ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವದ ದೇಶವಾಗಿ ಭಾರತ ಗುರುತಿಸಿಕೊಂಡಿದೆ. ಇದಕ್ಕೆ ನಮ್ಮ ಸಂವಿಧಾನವೇ ಕಾರಣವಾಗಿದೆ. ಅಂತಹ ಮಹತ್ವಪೂರ್ಣ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಚಿರಸ್ಮರಣೀಯರಾಗಿದ್ದಾರೆ ಎಂದರು.
ಅಂಬೇಡ್ಕರ್ ಚಿಂತನೆ, ಆಶಯಗಳನ್ನು ಜನಸಾಮಾನ್ಯರಿಗೆ ಪಸರಿಸುವ ಸಲುವಾಗಿ ವಿಜಯವಾಡದಲ್ಲಿ ಅಂಬೇಡ್ಕರ್ ಪ್ರತಿಮೆ, ಬೃಹತ್ ಗ್ರಂಥಾಲಯ ಹಾಗೂ ಅಂತರಾಷ್ಟ್ರೀಯ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಚಾಮರಾಜನಗರ ಜಿಲ್ಲೆಯಲ್ಲಿ ದಕ್ಷಿಣ ಭಾರತದಲ್ಲಿಯೇ ಅತಿದೊಡ್ಡ ಸಂಶೋಧನಾ ಕೇಂದ್ರವನ್ನು ಸಮಾಜ ಕಲ್ಯಾಣ ಇಲಾಖೆ ಮೂಲಕ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶೀಲ್ಪಾ ನಾಗ್ ಅವರು ತಿಳಿಸಿದರು.
ನಗರದ ಬುದ್ಧ ವಿಹಾರದ ಮಹೇಶ್ ಅವರು ಕಾರ್ಯಕ್ರಮದಲ್ಲಿ ಬುದ್ಧ ವಂದನೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ