ಚಾಮರಾಜನಗರ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ವಾಚನ ಮಾಡುವ ಮಹತ್ತರ ಕಾರ್ಯಕ್ರಮ ನಗರದಲ್ಲಿ ಇಂದು ಅರ್ಥಪೂರ್ಣವಾಗಿ ನಡೆಯಿತು.

ಮೊದಲಿಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಇತರೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತ ಸಂವಿಧಾನ ಗ್ರಂಥ ಹಾಗೂ ಪೀಠಿಕೆ ಮಾದರಿಯ ಚಿತ್ರವನ್ನು ಒಳಗೊಂಡ ರಥದ ಮೆರವಣಿಗೆ ಹಾಗೂ ಸಂವಿಧಾನ ಜಾಗೃತಿ ಜಾಥಾಗೆ ಗಣ್ಯರು ಚಾಲನೆ ನೀಡಿದರು.

ಗಣ್ಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿ, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು, ಸ್ತ್ರೀ ಶಕ್ತಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ರಾಷ್ಟ್ರಧ್ವಜ ಹಿಡಿದು ಬೃಹತ್ ಜಾಥಾದಲ್ಲಿ ಮುನ್ನೆಡೆದರು.

ನಗರದ ಬಿ. ರಾಚಯ್ಯ ಜೋಡಿರಸ್ತೆ, ಕೆಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ, ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ವೀರಭದ್ರೇಶ್ವರ ದೇವಸ್ಥಾನದ ರಸ್ತೆ ಮೂಲಕ ಸಾಗಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಜಾಥಾ ತಲುಪಿತು.

ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಎಲ್.ಇ.ಡಿ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಸಂವಿಧಾನ ಪೀಠಿಕೆ ವಾಚನ ಮಾಡುತ್ತಿದ್ದಂತೆಯೇ ಅದನ್ನು ಅನುಸರಿಸಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಅಧಿಕಾರಿ, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಜನಸ್ತೋಮ ಏಕಕಾಲದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ವಾಚನಮಾಡಿದರು. ‌.

ವರದಿ. ಆರ್ ಉಮೇಶ್.