ದೊಡ್ಡಬಳ್ಳಾಪುರ: ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ 2024 ಜ. 21 ಮತ್ತು 22 ರಂದು ನಡೆಯಲಿದ್ದು ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಜನಪ್ರಿಯ ವೈದ್ಯರಾದ ದೊಡ್ಡತುಮಕೂರು ಗ್ರಾಮದ ಡಾ.ಟಿ.ಎಚ್.ಆಂಜನಪ್ಪ ಅವರು ಸಮ್ಮೇಳನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶಾಸಕರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷರಾದ ಧೀರಜ್ ಮುನಿರಾಜು ತಿಳಿಸಿದರು.
ದೊಡ್ಡಬಳ್ಳಾಪುರ ಸಾಹಿತ್ಯ ಪರಿಷತ್ತಿನ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು
ಎರಡು ದಿನ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜ.21 ರಂದು ಮೊದಲ ಧ್ವಜಾರೋಹಣ, ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿಚಾರಗೋಷ್ಠಿ ಯುವಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಜ.22 ರಂದು ಮಕ್ಕಳ ಗೋಷ್ಠಿ ಮಹಿಳಾಗೋಷ್ಠಿ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಮಾಜಿ ಸದಸ್ಯ ಪ್ರೇಮಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ ಮೊದಲಾದವರು ಮಾತನಾಡಿ, ಬಾಶೆಟ್ಟಿಹಳ್ಳಿ ಕೈಗಾರಿಕಾ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನದಲ್ಲಿ ಸ್ಥಳೀಯರು ಭಾಗವಹಿಸುವ ಮೂಲಕ ಸಮ್ಮೇಳನ ಯಶಸ್ವಿಯಾಗಿ ನಡೆಯಲು ಎಲ್ಲಾ ಸಹಕಾರ ನೀಡಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಕೋಶಾಧ್ಯಕ್ಷ ಡಾ.ಮುನಿರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಬಾಶೆಟ್ಟಿಹಳ್ಳಿ ಗ್ರಾಮಪಂಚಾಯಿತಿ ಮಾಜಿ ಸದಸ್ಯರು ಮತ್ತು ಗ್ರಾಮದ ಮುಖಂಡರು ಭಾಗವಹಿದ್ದರು.
ಇದೇ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಯಿತು.