ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಮುಂಜಾಗ್ರತೆ ಕ್ರಮ ವಹಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ಸೂಚನೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಗುಂಡ್ಲುಪೇಟೆ ತಾಲ್ಲೊಕನ್ನು ಬರ ಪೀಡಿತ ಪ್ರದೇಶವೆಂದು ಈಗಾಗಲೇ ಸರ್ಕಾರ ಘೋಷಣೆ ಮಾಡಿದ್ದು ಬೇಸಿಗೆ ಸಮೀಪಿಸುತ್ತಿದ್ದು, ಅಂತಹ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗ ಬಹುದಾಗಿರುವುದರಿಂದ ಈಗಿನಿಂದಲೇ ಕುಡಿಯುವ ನೀರಿಗಾಗಿ ಸೂಕ್ತ ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡು, ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಹಂಗಳ, ಕನ್ನೆಗಾಲ, ಮಂಗಲ, ಚಿಕ್ಕಾಟಿ, ಹಿರಿಕಾಟಿ ಕೊಡಸೋಗೆ, ನಿಟ್ರೆ, ಹಾಲಹಳ್ಳಿ, ಬರಗಿ ಮೂಕಹಳ್ಳಿ ಸೇರಿದಂತೆ 18 ಗ್ರಾಮ ಪಂಚಾಯಿತಿಗಳ ವಿವಿಧ ಹಳ್ಳಿಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆಯೆಂದು ಪಿಡಿಒ ಅಧಿಕಾರಿಗಳು ಮಾಹಿತಿ ನೀಡಿದ ಮೇರೆಗೆ ನೂತನ ಕೊಳವೆಬಾವಿ ಕೊರೆಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಜನತೆಗೆ ನೀರು ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜುವಿಗೆ ಈಗಾಗಲೇ ರಚನೆಯಾಗಿರುವ ಟಾಸ್ಕ್ ಫೋರ್ಸ್ ಮೂಲಕ ತೀರ್ಮಾನಿಸಿ ಕ್ರಮ ಕೈಗೊಳ್ಳಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಿ ಎಂದು ತಿಳಿಸಿದರು.
ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಪ್ರಸ್ತುತ ಇರುವುದಿಲ್ಲ ಎಂಬ ಪಶು ಇಲಾಖೆಯ ಅಧಿಕಾರಿಗಳ ಮಾಹಿತಿ ಪಡೆದ ಸಚಿವರು ಯಾವುದೇ ಕಾರಣಕ್ಕೂ ಮೇವು ನಮ್ಮ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಹೋಗದಂತೆ ಗಡಿ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ತಪಾಸಣೆ ಮಾಡುವುದರ ಮೂಲಕ ಕಟ್ಟೆಚರ ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಗಡಿ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ನಿಗಾವಹಿಸಬೇಕು. ರೋಗ ಲಕ್ಷಣ, ಆರೋಗ್ಯದಲ್ಲಿ ಏರುಪೇರು ಕಂಡು ಬಂದವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಸಚಿವರು ತಿಳಿಸಿದರು.
ಜನತೆಯನ್ನು ಕಚೇರಿಗೆ ಅಲೆದಾಡಿಸುವ ಯಾವುದೇ ದೂರಗಳು ಬರದಂತೆ ನೋಡಿಕೊಳ್ಳಬೇಕು. ಪೌತಿಖಾತೆ, ಪಡಿತರ ಚೀಟಿಗೆ ಸಂಬಂಧಿಸಿದಂತಹ ತೊಂದರೆಗಳು ಬಗೆಹರಿಸಬೇಕು. ಅಧಿಕಾರಿಗಳು ಮನೆ ಮನೆಗೆ ಭೇಟಿ ಕೊಡುವ ಮೂಲಕ ಜನರ ಸಮಸ್ಯೆಯನ್ನು ಶೀಘ್ರಗತಿಯಲ್ಲಿ ಪರಿಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ, ಉಪವಿಭಾಗಾಧಿಕಾರಿ ಮಹೇಶ್, ತಾಲೂಕು ತಹಶೀಲ್ದಾರ್ ರಮೇಶ್ ಬಾಬು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಆರ್ ಉಮೇಶ್ ಚಾಮರಾಜನಗರ