ನಗರದಲ್ಲಿ ವಿಶಿಷ್ಟ, ವಿನೂತನ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ನಡೆದ ಸ್ವೀಪ್ ಕಾರ್ಯಕ್ರಮ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಚಾಮರಾಜನಗರ:ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದಲ್ಲಿ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶಿಷ್ಟ, ವಿನೂತನ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ನಗರದ ಚಾಮರಾಜೇಶ್ವರ ದೇವಾಲಯದಿಂದ ಅರಂಭವಾದ ಮತದಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ರ ಪ್ರಕಾಶ್ ಮೀನಾ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ಬೃಹತ್ ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಚಾಮರಾಜೇಶ್ವರ ದೇವಾಲಯದಿಂದ ಆರಂಭವಾಗಿ ನಗರದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿ ಸಾಗಿದ ಜಾಗೃತಿ ಜಾಥಾದಲ್ಲಿ ಜಾನಪದ ಮಹಿಳಾ ಕಲಾತಂಡಗಳೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಂಡಿದ್ದರು. ರಸ್ತೆಯುದ್ದಕ್ಕೂ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮೊಳಗಿಸಿ ಮತದಾನದ ಜಾಗೃತಿ ಮೂಡಿಸಿದರು. ಜಿಲ್ಲಾಡಳಿತ ಭವನದಲ್ಲಿ ಜಾಥಾ ಮುಕ್ತಾಯಗೊಂಡಿತು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಪ್ರಮುಖ ಗಣ್ಯರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂವಿಧಾನಶಿಲ್ಪಿಗೆ ಗೌರವ ನಮನ ಸಲ್ಲಿಸಿದರು.

ಅಲ್ಲದೆ ಜಿಲ್ಲಾಡಳಿತ ಭವನದ ಅವರಣದಲ್ಲಿ ತೆರೆಯಲಾಗಿದ್ದ ಮಳಿಗೆಗಳಲ್ಲಿ ವಿವಿಧ ಮಹಿಳಾ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಉತ್ಪನ್ನಗಳನ್ನು ಖರೀದಿಸಿ ಮಹಿಳಾ ಸದಸ್ಯರನ್ನು ಪ್ರೋತ್ಸಾಹಿಸಿದರು.

ನಂತರ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಹಿಳೆಯ ‘ಸಖೀ ಸೌರಭ’ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ವ್ಯಾಪಕವಾಗಿ ಆಯೋಜಿಸಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬಹಳ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಾನಪದ ಕಲೆಗಳ ತವರೂರು ಚಾಮರಾಜನಗರ ಜಿಲ್ಲೆಯಲ್ಲಿ ಪೌರಕಾರ್ಮಿಕರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಚುನಾವಣಾ ಕೆಲಸಗಳನ್ನು ಪಾರದರ್ಶಕವಾಗಿ ನಡೆಸಿ ಶೇ. 90ಕ್ಕಿಂತ ಹೆಚ್ಚು ಮತದಾನವಾಗುವಂತೆ ನೋಡಿಕೊಂಡು ಜಿಲ್ಲೆಯನ್ನು ಮುಂಚೂಣಿಗೆ ತರಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದ ಜಿಲ್ಲಾ ಚುನಾವಣಾ ಯುವ ರಾಯಭಾರಿಗಳಾದ ಚಲನಚಿತ್ರ ನಟ ಕಾರ್ತಿಕ್ ಮಹೇಶ್, ನಾಗಭೂಷಣ್ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಾದ ದೀಪಾ ಬುದ್ದೆ ಅವರುಗಳು ಮಾತನಾಡಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಚುನಾವಣೆಯಲ್ಲಿ ಎಲ್ಲರು ತಪ್ಪದೆ ಮತದಾನ ಮಾಡಬೇಕು. ಉತ್ತಮ ನಾಯಕರನ್ನು ಆಯ್ಕೆ ಮಾಡಲು ನೈತಿಕ ಮತದಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಆರಂಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಗುಂಪಿನ ಸದಸ್ಯರು ವಂದೇ ಮಾತರಂ ಕುರಿತ ಸಂದೇಶ ಸಾರುವ ರಾಷ್ಟಭಕ್ತಿ ಗೀತೆಗೆ ನೃತ್ಯ ಮಾಡಿ ಗಮನ ಸೆಳೆದರು.

ಇದೇ ವೇಳೆ ಜಿಲ್ಲಾ ಚುನಾವಣಾ ಯುವ ರಾಯಭಾರಿಗಳಾದ ಚಲನಚಿತ್ರ ನಟ ಕಾರ್ತಿಕ್ ಮಹೇಶ್, ನಾಗಭೂಷಣ್ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಾದ ದೀಪಾ ಬುದ್ದೆ ಹಾಗೂ ಮಹಿಳಾ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ತಾಲೂಕು ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಕೃಷ್ಣಪ್ಪ, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು

ವರದಿ ಆರ್ ಉಮೇಶ್ ಮಲಾರಪಾಳ್ಯ